ಕಾರವಾರ : ಇಂದು(ಏ.೧) ಡಿಸಿ ಕಚೇರಿಗೆ ಹಸು ಮತ್ತು ಕರುವಿನ ಆಗಮನವಾಗಿತ್ತು. ಸ್ವತಃ ಜಿಲ್ಲಾಧಿಕಾರಿ ಪೂಜೆ ಸಲ್ಲಿಸಿ ಸ್ವಾಗತಿಸಿದರು. ಯಾಕೆ ಅಂತೀರಾ? ಈ ವರದಿ ನೋಡಿ…
ಇದನ್ನೂ ನೋಡಿ : ಸತ್ತ ಗುರು ! ಕೊನೆಗೂ ಬದಲಾಯ್ತು ಅಂಗಡಿ ಹೆಸರು!
ಏ.೧ರಿಂದ ರಾಜ್ಯಾದ್ಯಂತ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮ ಆರಂಭಗೊಂಡಿದೆ. ಅದರಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಿತು.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
೫ನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ ಈ ಕಾರ್ಯಕ್ರಮಕ್ಕಾಗಿ ಒಂದು ಹಸು ಮತ್ತು ಕರುವನ್ನು ಡಿಸಿ ಕಚೇರಿಗೆ ಕರೆತರಲಾಗಿತ್ತು. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಹಸುಗಳಿಗೆ ಪೂಜೆ ಸಲ್ಲಿಸಿ, ಸ್ವಾಗತಿಸಿದರು. ಅವುಗಳಿಗೆ ಹಿಂಡಿ ತಿನ್ನಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಜಿಲ್ಲೆಯ ರೈತರು ತಮ್ಮ ಜಾನುವಾರುಗಳಿಗೆ ಕಾಲುಬಾಯಿ ಜ್ವರ ಲಸಿಕೆಯನ್ನು ತಪ್ಪದೇ ಹಾಕಿಸುವಂತೆ ಹಾಗೂ ಈ ಲಸಿಕಾ ಅಭಿಯಾನದ ಸದುಪಯೋಗ ಪಡೆಯುವಂತೆ ಕರೆ ನೀಡಿದರು.
ಜಿಲ್ಲೆಯಲ್ಲಿ ಏಪ್ರಿಲ್ 30ರವರೆಗೆ ಜಾನುವಾರುಗಳಿಗೆ 5ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಯಾವುದೇ ಜಾನುವಾರುಗಳು ಲಸಿಕೆಯಿಂದ ವಂಚಿತರಾಗದಂತೆ ಹಾಗೂ ಜಿಲ್ಲೆಯ ರೈತರು, ಜಾನುವಾರು ಸಾಕಾಣಿಕೆದಾರರು ಕಡ್ಡಾಯವಾಗಿ ತಮ್ಮ ಜಾನುವಾರುಗಳಿಗೆ ಲಸಿಕೆಯನ್ನು ಹಾಕಿಸುವಂತೆ ಹೇಳಿದರು.
ಕಾಲುಬಾಯಿ ಜ್ವರದಿಂದ, ರೈತರಿಗೆ ಆರ್ಥಿಕ ನಷ್ಟ ಉಂಟಾಗಲಿದ್ದು, ರೋಗದಿಂದ ಗುಣಮುಖವಾದ ಜಾನುವಾರುಗಳಲ್ಲಿ ಗರ್ಭ ಕಟ್ಟುವಿಕೆಯಲ್ಲಿ ವಿಳಂಬ, ಸಾಮರ್ಥ್ಯ ನಷ್ಟ ಹಾಗೂ ಹಾಲಿನ ಇಳುವರಿಯಲ್ಲಿ ಇಳಿಮುಖವಾಗುವ ಸಾಧ್ಯತೆಗಳಿವೆ. ಆ ನಿಟ್ಟಿನಲ್ಲಿ ರೋಗದಿಂದ ಸಂಪೂರ್ಣ ಸುರಕ್ಷತೆಗಾಗಿ 4-5 ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ಉಚಿತವಾಗಿ ಲಸಿಕೆಯನ್ನು ನೀಡಲಾಗುತ್ತಿದೆ. ಜಿಲ್ಲೆಯ ರೈತರು ಇದರ ಸದುಪಯೋಗವನ್ನು ಪಡೆಯಬೇಕು ಎಂದರು.
೧೨೮೯ ಗ್ರಾಮಗಳಲ್ಲಿ ಕಾರ್ಯಕ್ರಮ :
ಜಿಲ್ಲೆಯ ಎಲ್ಲಾ ೧೨೮೯ ಗ್ರಾಮಗಳಲ್ಲಿ ಪಶು ಪಾಲನಾ ಇಲಾಖೆಯಿಂದ ಲಸಿಕೆಯನ್ನು ನೀಡಲು ಬಂದ ಲಸಿಕೆದಾರರಿಗೆ ರೈತರು ಅಗತ್ಯ ಸಹಕಾರ ನೀಡಬೇಕು. ತನ್ಮೂಲಕ ಜಿಲ್ಲೆಯಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದರು.
ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಬೇಕಾದಷ್ಟು ಕಾಲುಬಾಯಿ ಲಸಿಕೆ ದಾಸ್ತಾನಿದೆ. ಪತ್ರಿ ೫೦-೮೦ ಜಾನುವಾರುಗಳಿಗೆ ಒಂದು ಬ್ಲಾಕ್‌ನಂತೆ ಒಟ್ಟು ೪೯೫೭ ಬ್ಲಾಕ್‌ಗಳನ್ನು ರಚಿಸಲಾಗಿದೆ. ೨೩೩ ಲಸಿಕೆದಾರರ ಮೂಲಕ ಪ್ರತಿ ಜಾನುವಾರುಗಳಿಗೆ ಪ್ರತ್ಯೇಕ ಸಿರಿಂಜ್ ಮತ್ತು ಬಳಸಲಾಗುತ್ತಿದೆ. ನಾಯಿ ಮತ್ತು ಬೆಕ್ಕುಗಳಿಗೆ ರೇಬಿಸ್ ರೋಗದ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳುವಂತೆ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ. ಕೆ. ಎಮ್. ಮೋಹನಕುಮಾರ ಹೇಳಿದರು.
ಇದೇ ಸಂದರ್ಭದಲ್ಲಿ ಕಾಲುಬಾಯಿ ಲಸಿಕೆ ಅಭಿಯಾನ ಕುರಿತ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ಬಿಡುಗಡೆಗೊಳಿಸಿದರು. ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ-1ಚಂದ್ರಶೇಖರ್, ಪೌರಾಯುಕ್ತ ರವಿಕುಮಾರ್, ಪಶುವೈದ್ಯಾಧಿಕಾರಿ ಡಾ. ಪ್ರಶಾಂತ ಕುಮಾರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಎಇಇ ಭಾಸ್ಕರ್ ಗೌಡ ಮತ್ತಿತರರು ಇದ್ದರು.