ಭಟ್ಕಳ ಡೈರಿ ವರದಿ

ಭಟ್ಕಳ: ತಾಲೂಕಿನ ತಲಾಂದನಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಗುರುವಾರ ಭಟ್ಕಳ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಮಾಜದ ನಿರಪರಾಧಿ ಯುವಕರನ್ನೇ ಬಂಧಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಬಂಧಿಸಲಾಗಿರುವ ಹಿಂದೂ ಯುವಕರನ್ನು ಬಿಡುಗಡೆ ಮಾಡಬೇಕು ಹಾಗೂ ಕಲ್ಲು ತೂರಾಟ ನಡೆಸಿದ ಆರೋಪದಲ್ಲಿರುವ ಅನ್ಯ ಕೋಮಿನ ಯುವಕರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ತಾಯಂದಿರು ಹಾಗೂ ಹಿಂದೂ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿ, ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸುನೀಲ ನಾಯ್ಕ, ಗೋವಿಂದ ನಾಯ್ಕ, ಈಶ್ವರ ನಾಯ್ಕ, ಶ್ರೀಕಾಂತ ನಾಯ್ಕ, ಲಕ್ಷ್ಮೀನಾರಾಯಣ ನಾಯ್ಕ, ರಾಮಕೃಷ್ಣ ನಾಯ್ಕ, ನಾಗೇಶ ನಾಯ್ಕ ಹೊನ್ನಿಗದ್ದೆ, ಕುಮಾರ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಕಲ್ಲು ತೂರಾಟದ ಆರೋಪ ಹಾಗೂ ಬಂಧನಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ತನಿಖೆಯ ಬಳಿಕ ಸ್ಪಷ್ಟವಾಗಬೇಕಿದೆ.

ಇದನ್ನೂ ಓದಿ :

ಭಟ್ಕಳದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ: ದೂರು-ಪ್ರತಿ ದೂರು ದಾಖಲು

ಸಂಗೀತಪುರದಲ್ಲಿ ರಂಜಿಸಿದ ನಿನಾದ ಭಾವ ಗಾನ ಯಾನ