ಭಟ್ಕಳ ಡೈರಿ ವರದಿ

ಭಟ್ಕಳ: ರಸ್ತೆ, ಸಾರಿಗೆ, ಆರೋಗ್ಯ, ಕುಡಿಯುವ ನೀರು, ವಿದ್ಯುತ್, ನೆಟ್‌ವರ್ಕ್, ಶಿಕ್ಷಣ ಸೇರಿದಂತೆ ಹಲವು ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಮಾರುಕೇರಿ ಗ್ರಾಮಸ್ಥರು ಅಧಿಕಾರಿಗಳ ಗಮನಕ್ಕೆ ಅಹವಾಲುಗಳನ್ನು ಸಲ್ಲಿಸಿದರು. ತಾಲೂಕಿನ ಸೂಸಗಡಿ ಹೋಬಳಿಯ ಮಾರುಕೇರಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ‘ಪ್ರಜಾಸೇವೆ ಆಂದೋಲನ’ದಲ್ಲಿ ಗ್ರಾಮಸ್ಥರು ತಮ್ಮ ವಿವಿಧ ಸಮಸ್ಯೆಗಳನ್ನು ಅಧಿಕಾರಿಗಳ ಮುಂದಿಟ್ಟರು.

ಸಹಾಯಕ ಆಯುಕ್ತ ಜಿ ಮಹೇಶ್ ಕಾರ್ಯಕ್ರಮ ಉದ್ಘಾಟಿಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ವಿವಿಧ ಇಲಾಖೆಗೆ ಸಂಬಂಧಿಸಿದ ಅರ್ಜಿಗಳನ್ನು ಸ್ವೀಕರಿಸಿದ ಅಧಿಕಾರಿಗಳು, ಸಮಸ್ಯೆಗಳ ಕುರಿತು ಮಾಹಿತಿ ಪಡೆದು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಗ್ರಾಮಸ್ಥರಿಗೆ ತಿಳಿಸಿದರು.

ಕಾರ್ಯಕ್ರಮದ ಮಾಹಿತಿ ಸಮರ್ಪಕವಾಗಿ ನೀಡದಿರುವ ಬಗ್ಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಹಾಯಕ ಆಯುಕ್ತರು, ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಮೇಲಾಧಿಕಾರಿಗಳಿಂದ ಕಾರ್ಯಕ್ರಮದ ಕುರಿತು ತಡವಾಗಿ ಮಾಹಿತಿ ಬಂದಿತ್ತು ಎಂದು ಸ್ಪಷ್ಟಪಡಿಸಿದರು. ಮುಂದಿನ ದಿನಗಳಲ್ಲಿ ಸಚಿವರ ಉಪಸ್ಥಿತಿಯಲ್ಲಿ ಮತ್ತೊಂದು ಪ್ರಜಾ ಸೇವೆ ಆಂದೋಲನ ಆಯೋಜಿಸಲಾಗುವುದು ಎಂದು ಅವರು ತಿಳಿಸಿದರು.

ರಸ್ತೆ, ನೆಟ್‌ವರ್ಕ್ ಸಮಸ್ಯೆ:

ಮಾರುಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ರಸ್ತೆಗಳು ಹದಗೆಟ್ಟಿದ್ದು, ಜಲಜೀವನ ಮಿಷನ್ ಕಾಮಗಾರಿಗಾಗಿ ರಸ್ತೆಗಳನ್ನು ಅಗೆದಿರುವುದರಿಂದ ಹಲವು ಕಡೆ ಹೊಂಡಗಳು ನಿರ್ಮಾಣವಾಗಿವೆ ಎಂದು ಗ್ರಾಮಸ್ಥರು ದೂರಿದರು. ಜಲಜೀವನ ಮಿಷನ್ ಕಾಮಗಾರಿಗಳನ್ನು ಪೂರ್ಣಗೊಳಿಸಿ ರಸ್ತೆಗಳನ್ನು ದುರಸ್ತಿ ಮಾಡಬೇಕು. ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆ ಪರಿಹರಿಸಬೇಕು. ರಸ್ತೆ ಬದಿಯ ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು ಹಾಗೂ ವಿದ್ಯುತ್ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಬಸ್ ಸೌಲಭ್ಯಕ್ಕೆ ಆಗ್ರಹ: ಮಾರುಕೇರಿ ಭಾಗದಲ್ಲಿ ಸಮರ್ಪಕ ಬಸ್ ಸೌಲಭ್ಯ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದರು. ಕನಿಷ್ಠ ಗಂಟೆಗೊಂದು ಸರ್ಕಾರಿ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು. ಅತ್ರೋಳಿ ಶಾಲೆಯನ್ನು ಪುನರಾರಂಭಿಸಬೇಕು ಎಂದು ಆಗ್ರಹಿಸಿದರು.

ಆರೋಗ್ಯ ಸೇವೆ ಬಗ್ಗೆ ಅಸಮಾಧಾನ:

ಕೋಣಾರ ಆಸ್ಪತ್ರೆಯಲ್ಲಿ ಕಳೆದ ಆರು ತಿಂಗಳಿಂದ ವೈದ್ಯರ ಕೊರತೆ ಇದೆ ಎಂದು ಗ್ರಾಮಸ್ಥರು ದೂರಿದರು. ಆಸ್ಪತ್ರೆಯ ಸ್ವಚ್ಛತೆ, ತಾಲೂಕು ವ್ಯಾಪ್ತಿಯ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಸಿಬ್ಬಂದಿ ಹಾಗೂ ಮೂಲಸೌಕರ್ಯ ಕೊರತೆಯನ್ನೂ ಅಧಿಕಾರಿಗಳ ಗಮನಕ್ಕೆ ತಂದರು. ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆ ಸೇವೆ ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬ ದೂರೂ ಕೇಳಿಬಂತು. ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ಕೆಲವು ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಗಮನ ನೀಡುತ್ತಿದ್ದಾರೆ ಎಂಬ ಆರೋಪವನ್ನು ಗ್ರಾಮಸ್ಥರು ಮಾಡಿದರು.

ಮಾರುಕೇರಿ ಭಾಗದಲ್ಲಿ ಆಶಾ ಹಾಗೂ ಆರೋಗ್ಯ ಕಾರ್ಯಕರ್ತರ ಕೊರತೆ, ಆಯುಷ್ಮಾನ್ ಆರೋಗ್ಯ ಕೇಂದ್ರಗಳಿಗೆ ಔಷಧಗಳ ಸಮರ್ಪಕ ಪೂರೈಕೆಯಾಗದಿರುವುದು ಹಾಗೂ ಎಂಡೋಸಲ್ಫಾನ್ ಸಂತ್ರಸ್ತರಿಗೆ ಅಗತ್ಯ ಔಷಧ ದೊರೆಯದಿರುವ ಸಮಸ್ಯೆಗಳನ್ನೂ ಪ್ರಸ್ತಾಪಿಸಲಾಯಿತು. ಪಶುವೈದ್ಯಕೀಯ ಸೇವೆಯ ಕೊರತೆಯ ಬಗ್ಗೆಯೂ ಗ್ರಾಮಸ್ಥರು ಅಧಿಕಾರಿಗಳ ಗಮನ ಸೆಳೆದರು.

ವನ್ಯಜೀವಿ ಹಾವಳಿ ನಿಯಂತ್ರಣಕ್ಕೆ ಮನವಿ:

ಅರಣ್ಯ ಪ್ರದೇಶದಿಂದ ಕಾಡುಹಂದಿ ಸೇರಿದಂತೆ ವಿವಿಧ ವನ್ಯಜೀವಿಗಳು ಗ್ರಾಮಗಳತ್ತ ಬರುತ್ತಿದ್ದು, ಮನೆ, ಅಡುಗೆಮನೆ ಹಾಗೂ ಶಾಲಾ ಆವರಣಗಳಿಗೆ ಹಾನಿ ಮಾಡುತ್ತಿವೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದರು. ವನ್ಯಜೀವಿಗಳ ಹಾವಳಿ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಇಲಾಖೆಗೆ ಮನವಿ ಮಾಡಿದರು.

ಜಾತಿ ಪ್ರಮಾಣಪತ್ರಕ್ಕೆ ವರ್ಷಗಳ ಕಾಯುವಿಕೆ: ಪರಿಶಿಷ್ಟ ಜಾತಿಯ ಗೊಂಡ ಸಮುದಾಯದ ಜಾತಿ ಪ್ರಮಾಣಪತ್ರ ವಿತರಣೆಯಲ್ಲಿ ವಿಳಂಬವಾಗುತ್ತಿರುವ ಬಗ್ಗೆಯೂ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ಕೆಲವರು ಎಂಟು ವರ್ಷಗಳಿಂದ ಪ್ರಮಾಣಪತ್ರಕ್ಕಾಗಿ ಅಲೆದಾಡುತ್ತಿದ್ದರೂ ಇದುವರೆಗೆ ಪ್ರಮಾಣಪತ್ರ ದೊರೆತಿಲ್ಲ ಎಂದು ತಿಳಿಸಿದರು. ಇದರಿಂದ ವಿದ್ಯಾರ್ಥಿಗಳು ಹಾಗೂ ಇತರ ಫಲಾನುಭವಿಗಳು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಹೇಳಿದರು. ಜಾತಿ ಪ್ರಮಾಣಪತ್ರ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಶಾಲೆ, ಅಂಗನವಾಡಿ ಸಮಸ್ಯೆಗಳ ಪ್ರಸ್ತಾಪ:

ಕಿತ್ರೆ ಅಂಗನವಾಡಿಗೆ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ವಿಳಂಬವಾಗಿರುವುದನ್ನು ಗ್ರಾಮಸ್ಥರು ಪ್ರಸ್ತಾಪಿಸಿದರು. ಕೋಟಖಂಡ ಶಾಲೆಗೆ ಇಬ್ಬರು ಶಿಕ್ಷಕರನ್ನು ನೇಮಕ ಮಾಡಬೇಕು. ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡದ ಬದಲಿಗೆ ಹೊಸ ಕಟ್ಟಡ ನಿರ್ಮಿಸಬೇಕು ಎಂದು ಮನವಿ ಮಾಡಿದರು.

ಜಲಜೀವನ ಮಿಷನ್‌ನಡಿ ನಿರ್ಮಿಸಿರುವ ನೀರಿನ ಟ್ಯಾಂಕ್‌ನಿಂದ ಸಮರ್ಪಕವಾಗಿ ನೀರು ಪೂರೈಕೆಯಾಗದಿರುವ ಸಮಸ್ಯೆಯನ್ನೂ ಸಭೆಯಲ್ಲಿ ಪ್ರಸ್ತಾಪಿಸಲಾಯಿತು.

ರುದ್ರಭೂಮಿ, ಪಿಂಚಣಿ, ಪಡಿತರ ಚೀಟಿ ಸಮಸ್ಯೆ: ಮಾರುಕೇರಿಯ ಕೆಲವು ಭಾಗಗಳಲ್ಲಿ ಸಾರ್ವಜನಿಕ ರುದ್ರಭೂಮಿಗೆ ಜಾಗ ಕಲ್ಪಿಸಬೇಕು. ಪಿಂಚಣಿ ಹಣ ವಿಳಂಬವಾಗುತ್ತಿರುವ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು. ರದ್ದುಗೊಂಡಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಮರುಪರಿಶೀಲಿಸಿ ಅರ್ಹರಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಪ್ರವೀಣ್ ಕಾರಂಡೆ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್ ಬಿ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ನಾಯಕ, ತಾಲೂಕು ಆರೋಗ್ಯಾಧಿಕಾರಿ ಡಾ ಸನ್, ವಲಯ ಅರಣ್ಯಾಧಿಕಾರಿ ವಿಶ್ವನಾಥ ನಾಯ್ಕ, ಪಂಚಾಯಿತಿ ನೋಡಲ್ ಅಧಿಕಾರಿ ರೇಣುಕಾಸ್ವಾಮಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉದಯ ಬೋರಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ, ಮಾರುಕೇರಿ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.

ಇದನ್ನೂ ಓದಿ :

ವಿಟಿಯು ರ‍್ಯಾಂಕ್‌ನೊಂದಿಗೆ ಮತ್ತೊಮ್ಮೆ ಮಿಂಚಿದ ಎಐಟಿಎಂ; ಮೊಹಮದ್ ಫಹಾದ್‌ಗೆ 6ನೇ ರ‍್ಯಾಂಕ್

ಮುಟ್ಟಳ್ಳಿಯಲ್ಲಿ ಸೆ ೨೭ರಂದು ಬೃಹತ್ ರಕ್ತದಾನ ಶಿಬಿರ