ಭಟ್ಕಳ ಡೈರಿ ವರದಿ

ಹೊಸನಗರ: ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಿಗೆ ಸೇರಿಸುವಂತೆ ನಿಯಮ ರೂಪಿಸಬೇಕು. ಇಲ್ಲವಾದಲ್ಲಿ ಅಂತಹ ಕುಟುಂಬಗಳ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವ ಕುರಿತು ಸರ್ಕಾರ ಆದೇಶ ಹೊರಡಿಸಬೇಕು ಎಂದು ಹೊಸನಗರ ತಾಲೂಕಿನ ಪುಣಜೆ ಗ್ರಾಮದ ರೋಹಿತ್ ಸಿ. ಅವರು ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯದ ಸರ್ಕಾರಿ ಶಾಲೆಗಳು ಸರ್ಕಾರದ ಮಹತ್ವದ ಆಸ್ತಿಯಾಗಿದ್ದು, ಅವುಗಳನ್ನು ಸಂರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹಲವು ಪೋಷಕರು ಆಂಗ್ಲ ಮಾಧ್ಯಮ ಶಿಕ್ಷಣದತ್ತ ಹೆಚ್ಚಿನ ಒಲವು ತೋರುತ್ತಿದ್ದು, ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಲು ಹೆಚ್ಚಿನ ಪ್ರಮಾಣದ ಹಣ ಖರ್ಚು ಮಾಡುತ್ತಿದ್ದಾರೆ. ಇದರಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿರುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಅವರು ಗಮನ ಸೆಳೆದಿದ್ದಾರೆ.

ಬಿಪಿಎಲ್ ಕಾರ್ಡ್ ಪಡೆಯುವ ಕುಟುಂಬಗಳು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಕೊಡಿಸಬೇಕು. ಈ ನಿಯಮವನ್ನು ಪಾಲಿಸದಿದ್ದಲ್ಲಿ ಬಿಪಿಎಲ್ ಕಾರ್ಡ್ ರದ್ದುಪಡಿಸುವಂತಹ ಕ್ರಮ ಕೈಗೊಂಡರೆ ಸರ್ಕಾರಿ ಶಾಲೆಗಳನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು ರೋಹಿತ್ ಸಿ. ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮ ಶಿಕ್ಷಣಕ್ಕೂ ಹೆಚ್ಚಿನ ಅವಕಾಶ ಕಲ್ಪಿಸಬೇಕು. ಉತ್ತಮ ತರಬೇತಿ ಪಡೆದ ಶಿಕ್ಷಕರನ್ನು ನೇಮಿಸುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸರ್ಕಾರಿ ಶಾಲೆಗಳ ಬಲವರ್ಧನೆ ಹಾಗೂ ಕನ್ನಡ ಮಾಧ್ಯಮ ಶಿಕ್ಷಣದ ಅಭಿವೃದ್ಧಿಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:

ಭಟ್ಕಳದ ಎಐಟಿಎಂ ವಿದ್ಯಾರ್ಥಿ ಪ್ರವೀಣ ರವಿ ಹರಿಜನಗೆ ಕರಾಟೆಯಲ್ಲಿ ಚಿನ್ನದ ಪದಕ

ಮುರ್ಡೇಶ್ವರದಲ್ಲಿ ಮನೆ ಬಾಗಿಲು ಮುರಿದು ಕಳ್ಳತನ: ೧೭.೫ ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ದೋಚಿದ ಕಳ್ಳರು