ಭಟ್ಕಳ ಡೈರಿ ವರದಿ

ಭಟ್ಕಳ: ತಾಲೂಕಿನ ವೆಂಕಟಾಪುರದ ಜಾಗಟೆಬೈಲ್ ಮೈದಾನದ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿ ವಿಚಿತ್ರವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ೨೧ ವರ್ಷದ ಯುವಕನ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ತಿಕ ತಂದೆ ವೆಂಕಟೇಶ ಮೊಗೇರ (೨೧) ಪ್ರಕರಣದ ಆರೋಪಿಯಾಗಿದ್ದಾನೆ.

ಪೊಲೀಸ್ ದೂರಿನ ಪ್ರಕಾರ, ನವೆಂಬರ್ ೧೧ರಂದು ಸಂಜೆ ಸುಮಾರು ೫.೪೫ರ ವೇಳೆಗೆ ಜಾಗಟೆಬೈಲ್ ಮೈದಾನದ ಸಮೀಪ ಯುವಕನೊಬ್ಬ ಮಾದಕ ವಸ್ತು ಸೇವನೆಯ ಅಮಲಿನಲ್ಲಿ ವಿಚಿತ್ರವಾಗಿ ವರ್ತಿಸುತ್ತಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಆತನನ್ನು ವಿಚಾರಿಸಿದಾಗ ಬಾಯಿಯಿಂದ ಗಾಂಜಾದ ಘಾಟು ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಈ ವೇಳೆ ತಾನು ಗಾಂಜಾ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ನಂತರ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಆತನ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪಿಎಸ್‌ಐ ಮಲ್ಲಿಕಾರ್ಜುನಯ್ಯ ಕೊರಾಣಿ ಅವರು ಸರ್ಕಾರದ ಪರವಾಗಿ ದೂರು ನೀಡಿದ್ದಾರೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ

ಇದನ್ನೂ ಓದಿ:

ಮುರ್ಡೇಶ್ವರದಲ್ಲಿ ನವೆಂಬರ್ ೧೪ರಂದು ಸಮುದ್ರ ಆರತಿ, ಸಂಜೆ ೬ಕ್ಕೆ ವಿಶೇಷ ಪೂಜೆ

ಮುರುಡೇಶ್ವರ ರೈಲ್ವೆ ನಿಲ್ದಾಣಕ್ಕೆ ವಂದೇ ಭಾರತ್ ಆಗಮನ: ಸ್ವಾಗತಕ್ಕೆ ಸಜ್ಜಾದ ಬಿಜೆಪಿ