ಭಟ್ಕಳ ಡೈರಿ ವರದಿ

ಭಟ್ಕಳ: ಬೆಂಗಳೂರು–ಮಡಗಾಂವ್ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶುಕ್ರವಾರ ಮಧ್ಯರಾತ್ರಿ ಮುರುಡೇಶ್ವರ ರೈಲ್ವೆ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಸಂಭ್ರಮದ ವಾತಾವರಣ ನಿರ್ಮಾಣವಾಯಿತು. ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ರೈಲಿಗೆ ಸ್ವಾಗತ ಕೋರಿದರು.

ರೈಲಿಗೆ ಪುಷ್ಪಾರ್ಚನೆ ಸಲ್ಲಿಸಿ ಸ್ವಾಗತಿಸಿದ ಕಾರ್ಯಕರ್ತರು, ‘ವಂದೇ ಭಾರತ್ ರೈಲಿಗೆ ಸ್ವಾಗತ ಸ್ವಾಗತ’, ‘ಭಾರತ್ ಮಾತಾ ಕಿ ಜೈ’ ಎಂಬ ಘೋಷಣೆಗಳನ್ನು ಮೊಳಗಿಸಿದರು. ರಾಷ್ಟ್ರಧ್ವಜ ಹಾಗೂ ಬಿಜೆಪಿ ಧ್ವಜಗಳು ರಾರಾಜಿಸಿದವು.

ಕರಾವಳಿ ರೈಲ್ವೆ ಸಂಪರ್ಕಕ್ಕೆ ಹೊಸ ಬಲ: ಇದಕ್ಕೂ ಮೊದಲು ರೈಲ್ವೆ ನಿಲ್ದಾಣದ ಪ್ಲಾಟಫಾರ್ಮ್ ಆವರಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ವಿಶೇಷತೆಗಳು ಹಾಗೂ ಪ್ರಯಾಣಿಕರಿಗೆ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಈ ರೈಲು ಸೇವೆಯಿಂದ ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ, ವ್ಯಾಪಾರ, ಉದ್ಯೋಗ ಹಾಗೂ ಪ್ರಯಾಣಿಕರ ಸಂಚಾರಕ್ಕೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು. ವಿಶೇಷವಾಗಿ ಪ್ರಮುಖ ಪ್ರವಾಸಿ ತಾಣವಾಗಿರುವ ಮುರುಡೇಶ್ವರಕ್ಕೆ ವಂದೇ ಭಾರತ್ ರೈಲಿನ ಸಂಪರ್ಕ ದೊರೆಯುತ್ತಿರುವುದು ಜಿಲ್ಲೆಯ ಪಾಲಿಗೆ ಮಹತ್ವದ ಬೆಳವಣಿಗೆಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಶಿವಾನಂದ ನಾಯ್ಕ, ಪಶ್ಚಿಮ ಘಟ್ಟ ಕಾರ್ಯಪಡೆಯ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ಬಿಜೆಪಿ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷ ಎನ್.ಎಸ್. ಹೆಗಡೆ, ಕಾರ್ಯದರ್ಶಿಗಳಾದ ಸುಬ್ರಾಯ ದೇವಡಿಗ, ಶ್ರೀಕಾಂತ ನಾಯ್ಕ, ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ

ಇದನ್ನೂ ಓದಿ :

ಬೆಂಗಳೂರು–ಗೋವಾ ವಂದೇ ಭಾರತ್ ರೈಲು: ಭಟ್ಕಳ–ಮುರುಡೇಶ್ವರ ಸೇರಿ ಕರಾವಳಿಗೆ ನೇರ ಸಂಪರ್ಕ

ಮಡಗಾಂವ್-ಮಂಗಳೂರು ವಂದೇ ಭಾರತ್ ರೈಲು ಬೆಂಗಳೂರಿಗೆ ವಿಸ್ತರಣೆ: ಉತ್ತರ ಕನ್ನಡ, ಕರಾವಳಿ ಭಾಗದ ಜನರಿಗೆ ಅನುಕೂಲ