ಭಟ್ಕಳ ಡೈರಿ ವರದಿ
ಮುರುಡೇಶ್ವರ: ರಾತ್ರಿ ವೇಳೆ ಅಪರಿಚಿತ ವ್ಯಕ್ತಿಗಳ ಅನುಮಾನಾಸ್ಪದ ಓಡಾಟದ ಕುರಿತು ಮಾಹಿತಿ ಬಂದ ಹಿನ್ನೆಲೆಯಲ್ಲಿ ಮುರುಡೇಶ್ವರ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ರಾತ್ರಿ ಪೊಲೀಸ್ ಗಸ್ತು ಹೆಚ್ಚಿಸಿದ್ದಾರೆ.
ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಹೆರಾಡಿ, ಕಾಯ್ಕಿಣಿ, ಬಸ್ತಿ, ತೆರ್ನ್ಮಕ್ಕಿ, ಅಗ್ಗಲಹೊಳೆ, ದೇವಿಕನ್, ಸಬಾತಿ, ಕಟಗೇರಿ, ಕುಂಬಾರಕೇರಿ ಹಾಗೂ ಕೋಟದ್ಮಕ್ಕಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಅಪರಿಚಿತ ವ್ಯಕ್ತಿಗಳು ರಾತ್ರಿ ವೇಳೆ ಓಡಾಡುತ್ತಿರುವ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ಪೊಲೀಸ್ ಸಿಬ್ಬಂದಿಯೊಂದಿಗೆ ಸ್ಥಳಗಳಿಗೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಸ್ಥಳೀಯರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದರೆ ತಕ್ಷಣ ಮಾಹಿತಿ ನೀಡಿ: ರಾತ್ರಿ ಸಮಯದಲ್ಲಿ ಯಾವುದೇ ಅಪರಿಚಿತ ಅಥವಾ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಮುರುಡೇಶ್ವರ ಪೊಲೀಸ್ ಠಾಣೆ, ಸಂಬಂಧಪಟ್ಟ ಬೀಟ್ ಸಿಬ್ಬಂದಿ ಅಥವಾ ತುರ್ತು ಪೊಲೀಸ್ ಸಹಾಯವಾಣಿ ೧೧೨ಕ್ಕೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಸಾರ್ವಜನಿಕರ ಅನುಕೂಲಕ್ಕಾಗಿ ಬೀಟ್ ಸಿಬ್ಬಂದಿಯ ಮೊಬೈಲ್ ಸಂಖ್ಯೆಗಳು ಹಾಗೂ ಪೊಲೀಸ್ ಠಾಣೆಯ ಸಂಪರ್ಕ ಮಾಹಿತಿಯನ್ನೂ ಹಂಚಿಕೊಳ್ಳಲಾಗಿದೆ. ಸಾರ್ವಜನಿಕರ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸಂಬಂಧಪಟ್ಟ ಪ್ರದೇಶಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ನಿರಂತರ ನಿಗಾ ವಹಿಸಿದ್ದಾರೆ.
ರಾತ್ರಿ ವೇಳೆ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದರೆ ಸಾರ್ವಜನಿಕರು ಆತಂಕಕ್ಕೊಳಗಾಗದೆ ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ಸಹಕರಿಸುವಂತೆ ಮನವಿ ಮಾಡಲಾಗಿದೆ.
ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ
ಇದನ್ನೂ ಓದಿ:




