ಭಟ್ಕಳ ಡೈರಿ ವರದಿ

ಭಟ್ಕಳ: ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿಂದ ಮಕ್ಕಳ ಲಸಿಕೆ ಹಾಗೂ ರೋಟಾ ಲಸಿಕೆ ಲಭ್ಯವಿಲ್ಲದಿರುವುದರಿಂದ ಪೋಷಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿ, ತಕ್ಷಣ ಲಸಿಕೆ ಪೂರೈಕೆ ಮಾಡುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ದೂರು ಸಲ್ಲಿಸಲಾಗಿದೆ.

ಆಸರಕೇರಿಯ ಹೇಮಾವತಿ ದಾಮೋದರ ನಾಯ್ಕ ಅವರು ಉತ್ತರ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸಲ್ಲಿಸಿರುವ ದೂರಿನಲ್ಲಿ, ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳಿಗೆ ಅಗತ್ಯವಿರುವ ಲಸಿಕೆಗಳ ಕೊರತೆಯಿಂದ ಸಾರ್ವಜನಿಕರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಕಳೆದ ಒಂದು ತಿಂಗಳಿಂದ ಮಕ್ಕಳ ಲಸಿಕೆ ಹಾಗೂ ರೋಟಾ ಲಸಿಕೆ ದೊರೆಯದಿರುವುದು ಪೋಷಕರಿಗೆ ಆತಂಕ ಉಂಟುಮಾಡಿದೆ. ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳು ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಲು ಹೆಚ್ಚಿನ ಹಣ ವೆಚ್ಚ ಮಾಡಬೇಕಾದ ಪರಿಸ್ಥಿತಿ ಎದುರಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಅಥವಾ ಸುಲಭವಾಗಿ ಲಭ್ಯವಾಗಬೇಕಾದ ಲಸಿಕೆಗಳ ಕೊರತೆಯಿಂದ ಬಡ ಕುಟುಂಬಗಳ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.

ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ಅಗತ್ಯ ಲಸಿಕೆಗಳನ್ನು ಕೂಡಲೇ ಪೂರೈಸಿ, ಮಕ್ಕಳಿಗೆ ಸಮಯಕ್ಕೆ ಸರಿಯಾಗಿ ಲಸಿಕೆ ದೊರೆಯುವಂತೆ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಹೇಮಾವತಿ ದಾಮೋದರ ನಾಯ್ಕ ಅವರು ಜಿಲ್ಲಾ ಆರೋಗ್ಯಾಧಿಕಾರಿಯನ್ನು ಒತ್ತಾಯಿಸಿದ್ದಾರೆ.

ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ

 ಸಂಬಂಧಿತ ಸುದ್ದಿಗಳು :

Appeal to Health Minister/ ಭಟ್ಕಳ ಸರ್ಕಾರಿ ಆಸ್ಪತ್ರೆ ಸಮಸ್ಯೆಗಳ ಪರಿಹಾರಕ್ಕೆ ಆರೋಗ್ಯ ಸಚಿವಗೆ ಮನವಿ

Government Hospital/ ಏಕಾಏಕಿ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಜಮಾಯಿಸಿದ ಸಾರ್ವಜನಿಕರು, ಯಾಕೆ ಗೊತ್ತಾ?