ಭಟ್ಕಳ ಡೈರಿ ವರದಿ
ಭಟ್ಕಳ: ಆರೋಗ್ಯ ಇಲಾಖೆಯ ಯೋಜನೆಗಳನ್ನು ಮನೆಮನೆಗೆ ತಲುಪಿಸುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಆದರೆ ಹಗಲಿರುಳು ಶ್ರಮಿಸುತ್ತಿರುವ ಈ ಕಾರ್ಯಕರ್ತೆಯರಿಗೆ ಸೂಕ್ತ ಗೌರವ, ಆರ್ಥಿಕ ಭದ್ರತೆ ಹಾಗೂ ಅಗತ್ಯ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಬಿಜೆಪಿ ಉತ್ತರ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಶಾಂತಾರಾಮ ಭಟ್ಕಳ ಆರೋಪಿಸಿದ್ದಾರೆ.
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಆರೋಗ್ಯ ಇಲಾಖೆಯ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ತಾಯಿ ಮತ್ತು ಶಿಶು ಆರೋಗ್ಯ, ಗರ್ಭಿಣಿಯರ ಆರೈಕೆ, ಲಸಿಕಾ ಕಾರ್ಯಕ್ರಮ ಹಾಗೂ ಆರೋಗ್ಯ ಜಾಗೃತಿ ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಜನರ ಆರೋಗ್ಯ ರಕ್ಷಣೆಗಾಗಿ ವೈಯಕ್ತಿಕ ಬದುಕನ್ನೂ ಲೆಕ್ಕಿಸದೆ ದುಡಿಯುತ್ತಿರುವ ಇವರ ಸೇವೆಗೆ ತಕ್ಕ ಪ್ರತಿಫಲ ದೊರೆಯದಿರುವುದು ವಿಷಾದನೀಯ. ಆಶಾ ಕಾರ್ಯಕರ್ತೆಯರಿಗೆ ನಿಗದಿತ ಮಾಸಿಕ ಗೌರವಧನ ನೀಡುವುದರ ಜತೆಗೆ ಬಾಕಿ ಇರುವ ಪ್ರೋತ್ಸಾಹಧನವನ್ನು ಸಕಾಲದಲ್ಲಿ ಬಿಡುಗಡೆ ಮಾಡಬೇಕು. ಕೆಲಸದ ಒತ್ತಡ ಕಡಿಮೆಗೊಳಿಸಿ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು. ನಿವೃತ್ತಿಯ ನಂತರ ಸೂಕ್ತ ಆರ್ಥಿಕ ಸೌಲಭ್ಯ ಕಲ್ಪಿಸಬೇಕು ಎಂಬುದು ಅವರ ಪ್ರಮುಖ ಬೇಡಿಕೆಗಳಾಗಿವೆ ಎಂದು ತಿಳಿಸಿದ್ದಾರೆ.
ಚುನಾವಣೆಗೂ ಮುನ್ನ ಆಶಾ ಕಾರ್ಯಕರ್ತೆಯರಿಗೆ ಹಲವು ಭರವಸೆಗಳನ್ನು ನೀಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಅವುಗಳನ್ನು ಸಂಪೂರ್ಣವಾಗಿ ಈಡೇರಿಸುವಲ್ಲಿ ವಿಫಲವಾಗಿದೆ. ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳು ಜನಸಾಮಾನ್ಯರಿಗೆ ತಲುಪುವಲ್ಲಿ ಆಶಾ ಕಾರ್ಯಕರ್ತೆಯರ ಶ್ರಮ ನಿರ್ಣಾಯಕವಾಗಿದೆ. ಆದರೆ ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದೆ ಕೇವಲ ಭರವಸೆಗಳಿಗೆ ಸೀಮಿತವಾಗಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಕೂಡಲೇ ಆಶಾ ಕಾರ್ಯಕರ್ತೆಯರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯಯುತ ಪರಿಹಾರ ಕಲ್ಪಿಸಬೇಕು. ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸದಿರುವುದನ್ನು ಜನಸಾಮಾನ್ಯರು ಗಮನಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಶಿವಾನಿ ಶಾಂತಾರಾಮ ಭಟ್ಕಳ ಎಚ್ಚರಿಸಿದ್ದಾರೆ.
ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ
ಇದನ್ನೂ ಓದಿ:
ನ. ೩೦ರಂದು ಭಟ್ಕಳದಲ್ಲಿ ಬಿಜೆಪಿ ಬೃಹತ್ ಪಾದಯಾತ್ರೆ, ಪ್ರತಿಭಟನೆ
ಮುರುಡೇಶ್ವರ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ಗೆ ಸ್ವಾಗತ; ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು




Trackbacks/Pingbacks