ಭಟ್ಕಳ ಡೈರಿ ವರದಿ
ಭಟ್ಕಳ: ಸ್ವಾತಂತ್ರ್ಯ ಬಂದು ೭೫ ವರ್ಷಗಳು ಕಳೆದರೂ ಜನರ ಮೂಲಭೂತ ಸಮಸ್ಯೆಗಳು ಸಂಪೂರ್ಣವಾಗಿ ಬಗೆಹರಿದಿಲ್ಲ. ಇಂದಿಗೂ ಜನರು ವಿವಿಧ ಸಮಸ್ಯೆಗಳನ್ನು ಹೊತ್ತುಕೊಂಡು ಕಚೇರಿಗಳಿಗೆ ಅಲೆಯುವ ಪರಿಸ್ಥಿತಿ ಇದೆ ಎಂದು ವಿಧಾನಸಭೆ ಉಪಸಭಾಧ್ಯಕ್ಷ ಹಾಗೂ ಭಟ್ಕಳ ಶಾಸಕ ಮಂಕಾಳ ಎಸ್. ವೈದ್ಯ ಹೇಳಿದರು. ತಾಲೂಕಿನ ಬೆಳ್ಕೆ ಗ್ರಾಮದ ಬೊಮ್ಮನಕೇರಿ ದೇವಸ್ಥಾನದ ಸಭಾಭವನದಲ್ಲಿ ಶನಿವಾರ ನಡೆದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಮನೆ ನಿರ್ಮಾಣ, ಅಂಗವಿಕಲ ಮಕ್ಕಳ ಮಾಸಾಶನ, ಪೋಡಿ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ೮೦ಕ್ಕೂ ಅಧಿಕ ಮನವಿಗಳು ಸಲ್ಲಿಕೆಯಾದವು. ಅಧಿಕಾರಿಗಳು ಸ್ಥಳದಲ್ಲೇ ಜನರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಉದ್ಯೋಗ ಖಾತ್ರಿ ಅರ್ಜಿಗಳ ಮರುದಾಖಲೆಗೆ ಕ್ರಮ: ಉದ್ಯೋಗ ಖಾತ್ರಿ ಯೋಜನೆಯಡಿ ಕೊಟ್ಟಿಗೆ ನಿರ್ಮಾಣಕ್ಕಾಗಿ ಸಲ್ಲಿಸಿದ್ದ ಅರ್ಜಿಗಳನ್ನು ತಂತ್ರಾಂಶ ಬಂದ್ ಆದ ಬಳಿಕ ಪಿಡಿಒ ರದ್ದುಪಡಿಸಿದ್ದಾರೆ ಎಂದು ಗ್ರಾಮಸ್ಥರೊಬ್ಬರು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ರದ್ದಾದ ಅರ್ಜಿಗಳನ್ನು ಮರುದಾಖಲಿಸಿ ಅನುದಾನ ಬಿಡುಗಡೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಬೆಳ್ಕೆ ರಸ್ತೆ, ಬೀದಿದೀಪಗಳ ದುರಸ್ತಿಗೆ ಆಗ್ರಹ: ಬೆಳ್ಕೆ ಭಾಗದ ಹದಗೆಟ್ಟ ರಸ್ತೆಗಳ ಸಮಸ್ಯೆಯೂ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಪ್ರಸ್ತಾಪವಾಯಿತು. ಹದಗೆಟ್ಟ ರಸ್ತೆಗಳನ್ನು ದುರಸ್ತಿಗೊಳಿಸುವುದರ ಜತೆಗೆ ಅಗತ್ಯವಿರುವ ಕಡೆಗಳಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಬೇಕು ಹಾಗೂ ಬೀದಿದೀಪಗಳನ್ನು ಅಳವಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.
ಮೊಗೇರ ಸಮುದಾಯಕ್ಕೆ ಜಾತಿ ಪ್ರಮಾಣಪತ್ರದ ಬೇಡಿಕೆ: ಮೊಗೇರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವಂತೆ ಹಲವು ಮಂದಿ ಮನವಿ ಸಲ್ಲಿಸಿದರು. ಜಾತಿ ಪ್ರಮಾಣಪತ್ರ ದೊರೆಯದ ಕಾರಣ ಉದ್ಯೋಗಾವಕಾಶ ಕಳೆದುಕೊಳ್ಳುವಂತಾಗಿದ್ದು, ಸಮುದಾಯದವರು ಸರ್ಕಾರದ ವಿವಿಧ ಸೌಲಭ್ಯಗಳಿಂದಲೂ ವಂಚಿತರಾಗುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಬೋಯಲ್ ಹರ್ಷಲ್ ನಾರಾಯಣ ರಾವ್, ಈ ಸಂಬಂಧದ ೧೦೮ ಅರ್ಜಿಗಳು ನ್ಯಾಯಾಲಯದಲ್ಲಿವೆ. ನ್ಯಾಯಾಲಯದ ತೀರ್ಪು ಬರುವವರೆಗೆ ಪ್ರಮಾಣಪತ್ರ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಜಾತಿ ಪ್ರಮಾಣಪತ್ರ ನೀಡುವ ಕುರಿತು ಜಿಲ್ಲಾ ಡಿಸಿವಿಸಿ ಸಮಿತಿಯೇ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ ಎನ್., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಯೋಗೇಶ ಸಿ.ಕೆ., ಉಪವಿಭಾಗಾಧಿಕಾರಿ ಜೆ. ಮಹೇಶ್, ತಹಶೀಲ್ದಾರ ಉಷಾ ಪಾವಸ್ಕರ, ಉಪತಹಶೀಲ್ದಾರ ರಜನಿ ದೇವಾಡಿಗ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ
ಇದನ್ನೂ ಓದಿ :
ಮುಟ್ಟಳ್ಳಿ ಬೈಪಾಸ್ನಲ್ಲಿ ಭೀಕರ ಅಪಘಾತ: ಕಾರು–ಪಿಕಪ್ ಮುಖಾಮುಖಿ ಡಿಕ್ಕಿ, ಏಳು ಮಂದಿ ಗಾಯ


