ಭಟ್ಕಳ ಡೈರಿ ವರದಿ

ಮುರುಡೇಶ್ವರ: ಭಟ್ಕಳ ತಾಲೂಕಿನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಪ್ರತಿಭೆಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಮುರುಡೇಶ್ವರದ ಆರ್.ಎನ್. ಶೆಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಸಾಂಸ್ಕೃತಿಕ ಚಟುವಟಿಕೆಗಳ ಸ್ಪರ್ಧೆಗಳು ಯಶಸ್ವಿಯಾಗಿ ಸಂಪನ್ನಗೊಂಡವು.

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರ ಕಚೇರಿ ಕಾರವಾರ ಹಾಗೂ ಮುರುಡೇಶ್ವರದ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಈ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಕುಮಟಾದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪಪ್ರಾಚಾರ್ಯ ಜಿ.ಎಸ್. ಭಟ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿವಿಧ ನಿದರ್ಶನಗಳ ಮೂಲಕ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ಸಂದೇಶ ನೀಡಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ನಿವೃತ್ತ ಇತಿಹಾಸ ಉಪನ್ಯಾಸಕ ಎಂ.ಎಸ್. ಹೆಗಡೆ ಮಾತನಾಡಿ, ವಿದ್ಯಾರ್ಥಿಗಳು ಜಿಲ್ಲಾ, ವಲಯ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಜಯಗಳಿಸುವ ಮೂಲಕ ಭಟ್ಕಳ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಹಾರೈಸಿದರು. ಆರ್.ಎನ್. ಶೆಟ್ಟಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯೆ ಅಶ್ವಿನಿ ಶೇಟ ಅಧ್ಯಕ್ಷತೆ ವಹಿಸಿದ್ದರು.

ಉದ್ಘಾಟನಾ ಕಾರ್ಯಕ್ರಮದ ಬಳಿಕ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು. ವಿದ್ಯಾರ್ಥಿಗಳು ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಿದರು. ನಂತರ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಆರ್.ಎನ್.ಎಸ್. ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಕೇಶವಮೂರ್ತಿ ಉಪಸ್ಥಿತರಿದ್ದರು. ಮಾನ್ಯ ನಾಯ್ಕ ಸ್ವಾಗತಿಸಿದರು. ಪ್ರೇಕ್ಷಾ ಹರಿಕಂತ್ರ ವಂದಿಸಿದರು. ಭೂಮಿಕಾ ನಾಯ್ಕ ಹಾಗೂ ರಶ್ಮಿ ಆಚಾರಿ ಕಾರ್ಯಕ್ರಮ ನಿರೂಪಿಸಿದರು.

ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ

ಇದನ್ನೂ ಓದಿ: 

ಬೆಳಗಾವಿ ವಿಭಾಗ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ತೆರ್ನಮಕ್ಕಿ ಕೆಪಿಎಸ್ ಶಾಲೆಗೆ ಪ್ರಥಮ ಸ್ಥಾನ; ರಾಜ್ಯಮಟ್ಟಕ್ಕೆ ಆಯ್ಕೆ

ಮುರ್ಡೇಶ್ವರದಲ್ಲಿ ನವೆಂಬರ್ ೧೪ರಂದು ಸಮುದ್ರ ಆರತಿ, ಸಂಜೆ ೬ಕ್ಕೆ ವಿಶೇಷ ಪೂಜೆ