ಭಟ್ಕಳ ಡೈರಿ ವರದಿ
ಹೊನ್ನಾವರ: ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅವರಿಗೆ ವಿವಿಧ ಹಂತಗಳಲ್ಲಿ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಹೊನ್ನಾವರ ತಾಲೂಕಿನ ಗೇರುಸೊಪ್ಪದ ನಾಗಂತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು. ಉಪ್ಪಿನಗೋಳಿ ಶ್ರೀ ಗುತ್ತಿಕನ್ನಿಕಾ ಪರಮೇಶ್ವರಿ ದೇವಸ್ಥಾನದ ಸಭಾಂಗಣ ಹಾಗೂ ಆನೆಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಗೋವಿಂದ ಎಸ್. ನಾಯ್ಕ ಮಾತನಾಡಿ, ಮಕ್ಕಳ ಪ್ರತಿಭೆಯನ್ನು ಗುರುತಿಸಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿವೆ. ಶಾಲೆಗಳ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಆಡಳಿತ ಮಂಡಳಿಯಿಂದ ಅವಕಾಶ ದೊರೆಯುತ್ತಿದ್ದು, ಮುಂದಿನ ದಿನಗಳಲ್ಲಿಯೂ ಇಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಲಾಗುವುದು ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಜುನಾಥ ನಾಯ್ಕ ಮಾತನಾಡಿ, ಕಳೆದ ವರ್ಷದಿಂದ ಅಕ್ಟೋಬರ್ ರಜೆಯ ಬಳಿಕ ಪ್ರತಿಭಾ ಕಾರಂಜಿ ನಡೆಯುತ್ತಿದ್ದು, ಕಾರ್ಯಕ್ರಮದ ಸಂಘಟನೆ ಉತ್ತಮವಾಗಿದೆ. ಇದರಿಂದ ಶಾಲಾ ಮಕ್ಕಳಿಗೆ ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಭಾಗವಹಿಸಲು ಅವಕಾಶ ದೊರೆಯುತ್ತದೆ ಎಂದು ಶುಭ ಹಾರೈಸಿದರು. ಖಂಡೋಡಿ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಈಶ್ವರ ಮರಾಠಿ ಮಾತನಾಡಿ, ಸ್ಪರ್ಧೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ, ಭಾಗವಹಿಸುವಿಕೆ ಮುಖ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಾಗೇಶ ನಾಯ್ಕ ಮಾತನಾಡಿ, ಸರ್ಕಾರ ಹಲವು ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದ್ದು, ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳಲ್ಲಿ ಅವರ ಪ್ರತಿಭೆ ಗುರುತಿಸಲು ಅವಕಾಶ ಕಲ್ಪಿಸಬೇಕು ಎಂದು ಕರೆ ನೀಡಿದರು.
ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಲಕ್ಷ್ಮಣ ಮಂಜುನಾಥ ಪಟಗಾರ ಹಾಗೂ ಎಸ್.ಎಂ. ಲೋಪಿಸ್ ಅವರನ್ನು ನಾಗಂತೂರು ಕ್ಲಸ್ಟರ್ ವತಿಯಿಂದ ಗೌರವಿಸಲಾಯಿತು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಗರಬಸ್ತಿಕೇರಿಯ ನಿವೃತ್ತ ಶಿಕ್ಷಕಿ ಗೀತಾ ಕೋಚರೇಕರ್ ಅವರನ್ನೂ ಸನ್ಮಾನಿಸಲಾಯಿತು.
ನಂತರ ವಿವಿಧ ಸ್ಪರ್ಧೆಗಳು ನಡೆದಿದ್ದು, ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಬಹುಮಾನಗಳ ಪ್ರಾಯೋಜಕರಾದ ಮಂಜುನಾಥ ನಾಯ್ಕ ಮಕ್ಕಳಿಗೆ ಬಹುಮಾನ ನೀಡಿದರು. ಸರಿತಾ ನಾಯ್ಕ ಹಾಗೂ ಲಕ್ಷ್ಮಣ ಪಟಗಾರ ಕಾರ್ಯಕ್ರಮ ನಿರೂಪಿಸಿದರು. ಸಿಆರ್ಪಿಗಳಾದ ದಿನೇಶ ದೇಶಭಂಡಾರಿ ಸ್ವಾಗತಿಸಿದರು. ಸುಭಾಸ ನಾಯ್ಕ ವಂದಿಸಿದರು.
ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ
ಇದನ್ನೂ ಓದಿ:



