ಭಟ್ಕಳ ಡೈರಿ ವರದಿ

ಭಟ್ಕಳ: ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ವಿಧಾನಸಭಾ ಉಪಸಭಾಧ್ಯಕ್ಷ ಮಂಕಾಳ ಎಸ್. ವೈದ್ಯ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ ೧೪ರಂದು ಬೆಳಕೆಯಲ್ಲಿ ಪ್ರಜಾಸೇವೆ ಆಂದೋಲನ ಸಭೆ ಆಯೋಜಿಸಲಾಗಿದೆ. ಬೆಳಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನಮದ್ಲು ಬೆಳಕೆಯ ಬೋಮ್ಮನಕೇರಿ ದೇವಸ್ಥಾನದ ಸಭಾಭವನದಲ್ಲಿ ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೩ ಗಂಟೆಯವರೆಗೆ ಸಭೆ ನಡೆಯಲಿದೆ.

ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಭೂಯರ್ ಹರ್ಷಲ್ ನಾರಾಯಣ ರಾವ್ ಅವರು ಸಭೆಯಲ್ಲಿ ಭಾಗವಹಿಸಲಿದ್ದು, ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡ ಉಪಸ್ಥಿತರಿರಲಿದ್ದಾರೆ. ಇದರಿಂದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಮುಂದೆಯೇ ನೇರವಾಗಿ ಮಂಡಿಸಲು ಅವಕಾಶ ದೊರೆಯಲಿದೆ.

ಹಲವು ಸಮಸ್ಯೆಗಳ ಬಗ್ಗೆ ಅಹವಾಲು ಸಲ್ಲಿಸಬಹುದು: ಗ್ರಾಮೀಣ ಭಾಗದ ಜನರು ಎದುರಿಸುತ್ತಿರುವ ರಸ್ತೆ ಸಂಪರ್ಕ, ಕುಡಿಯುವ ನೀರು, ಚರಂಡಿ ವ್ಯವಸ್ಥೆ, ವಿದ್ಯುತ್, ಆರೋಗ್ಯ, ಶಿಕ್ಷಣ, ಸಾರಿಗೆ, ಕಂದಾಯ, ಪಿಂಚಣಿ, ವಸತಿ ಸೇರಿದಂತೆ ವಿವಿಧ ಸರ್ಕಾರಿ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಾರ್ವಜನಿಕರು ಸಭೆಯಲ್ಲಿ ಅಹವಾಲು ಸಲ್ಲಿಸಬಹುದಾಗಿದೆ. ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವ ಮೂಲಕ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಹಾಗೂ ಪರಿಹಾರ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಸುತ್ತಮುತ್ತಲಿನ ಗ್ರಾಮಸ್ಥರಿಗೂ ಆಹ್ವಾನ: ವಿವಿಧ ಇಲಾಖೆಗಳ ಅಧಿಕಾರಿಗಳು ಒಂದೇ ವೇದಿಕೆಯಲ್ಲಿ ಲಭ್ಯವಿರುವುದರಿಂದ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದನೆ ದೊರೆಯುವ ನಿರೀಕ್ಷೆಯಿದೆ. ಆದ್ದರಿಂದ ಬೆಳಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರು ಮಾತ್ರವಲ್ಲದೆ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಕುಂದುಕೊರತೆಗಳನ್ನು ಸಲ್ಲಿಸುವಂತೆ ತಹಶೀಲ್ದಾರ್ ಉಷಾ ಪಾವಸ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ

ಇದನ್ನೂ ಓದಿ:

ಭಟ್ಕಳ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದಿಂದ ಜಿ.ಯು. ಭಟ್ಟರಿಗೆ ಗೌರವ ಸನ್ಮಾನ

ಆಸರಕೇರಿಯಲ್ಲಿ ೨೪ ದಿನಗಳ ಕಾರ್ತಿಕ ಭಜನೋತ್ಸವ: ಭಕ್ತಿಭಾವದಲ್ಲಿ ಮಿಂದೇಳುವ ಭಟ್ಕಳ ನಗರ